ದಾವಣಗೆರೆ : ಜೆಡಿಎಸ್ ಹಾಗೂ ಬಿಜೆಪಿಯವರಿಗೆ ನನ್ನನ್ನು ಕಂಡರೆ ಭಯ. ಹೀಗಾಗಿ ಪದೇ ಪದೇ ನನ್ನನ್ನೇ ಟಾರ್ಗೆಟ್ ಮಾಡಿ ಟೀಕೆ ಮಾಡುತ್ತಿರುತ್ತಾರೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜಿಲ್ಲೆಯ ಹರಿಹರ ಸಮೀಪದ ಕುಮಾರಪಟ್ಟಣಂನ ಗೆಸ್ಟ್ ಹೌಸ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 12 ಕ್ಷೇತ್ರಗಳಲ್ಲಿ ಗೆಲ್ಲಲಿದೆ. 15 ಸ್ಥಾನಗಳಲ್ಲಿ ಗೆದ್ದರೂ ಅಚ್ಚರಿ ಏನಿಲ್ಲ. ಕಾಂಗ್ರೆಸ್ನಲ್ಲಿ ಹಲವು ಮುಖಂಡರಿದ್ದಾರೆ. ಅವರನ್ನು ಬಿಟ್ಟು ಜೆಡಿಎಸ್ ಹಾಗೂ ಬಿಜೆಪಿ ಪಕ್ಷದವರೂ ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಅವರಿಗೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಿದ್ದರಾಮಯ್ಯ ಅವರಿಂದ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂಬ ಭಯ. ಉಪಚುನಾವಣೆಯಲ್ಲಿ ಬಿಜೆಪಿ ಯದ್ವಾ-ತದ್ವಾ ಹಣ ಖರ್ಚು ಮಾಡುತ್ತಿದೆ. ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಆಮಿಷವೊಡ್ಡಿ ಮತಯಾಚನೆ ಮಾಡುತ್ತಿರುವುದು ಚುನಾವಣಾ ಆಯೋಗದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದ್ದೇವೆ. ಆದರೂ ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಚುನಾವಣಾ ಆಯೋಗವೂ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ಕಿಡಿಕಾರಿದರು.










