ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಆ ಮೂಲಕ ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್, ಮೇಲ್ಮನವಿ ಸಲ್ಲಿಸಿದ್ದರು.
ಇಂದು ಹೈಕೋರ್ಟ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಸಿಜೆ ಪ್ರಸನ್ನ ಬಿ ವರಾಳೆ ಮತ್ತು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಮೇಲ್ಮನವಿ ಹಿಂಪಡೆಯಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿ ಗುರುದೇವ್ ಸಿಂಗ್ ಮತ್ತು ಪಂಜಾಬ್ ಸರ್ಕಾರದ ಪ್ರಕರಣವನ್ನು ಉಲ್ಲೇಖಿಸಿತು. ಪ್ರಕರಣದ ಅರ್ಹತೆ ಬಗ್ಗೆ ಯಾವುದೇ ತೀರ್ಮಾನ ನೀಡುತ್ತಿಲ್ಲ. ಸಂಪುಟದ ನಿರ್ಧಾರವನ್ನು ಸಿಬಿಐ ಸೇರಿದಂತೆ ಯಾರು ಬೇಕಾದರೂ ಪ್ರಶ್ನಿಸಬಹುದು. ನಂತರ ಅರ್ಜಿಯನ್ನು ಪರಿಗಣಿಸಿ ಮುಂದುವರೆಯಬೇಕಾ ಬೇಡವಾ ಅಂತ ನಿರ್ಧಾರ ಮಾಡಲಾಗುತ್ತದೆ ಎಂದು ಪೀಠ ಹೇಳಿದೆ.
ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಲ್ಲದೆ, ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಡಿಕೆ ಶಿವಕುಮಾರ್ ಪರ ವಕೀಲರು ಲಿಖಿತ ಮೆಮೊ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ಪೀಠ, ಮೇಲ್ಮನವಿ ಹಿಂಪಡೆಯುವುದಕ್ಕೆ ಅನುಮತಿ ನೀಡಿತು.










