ಡಿಕೆ ಶಿವಕುಮಾರ್ ಕಾಂಗ್ರೆಸ್‍ನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ: ಆರ್ ಅಶೋಕ್ ವ್ಯಂಗ್ಯ.

33

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬಣದ 7 ಜನ ಸಚಿವರು ಮತ್ತು 35 ಜನ ಶಾಸಕರು ನಿನ್ನೆ ರಾತ್ರಿ ಡಿನ್ನರ್ ಮೀಟಿಂಗ್ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್, ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಕುಹಕವಾಡಿದ್ದಾರೆ. ಕಾಂಗ್ರೆಸ್‍ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಕಾಲ ಬಂದಿದೆ ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಔತಣಕೂಟ ನಡೆಸಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರೇ, ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅಶೋಕ್ ತಿಳಿಸಿದ್ದಾರೆ. ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಸಾರಿಗೆ ದರ ಶೇಕಡ 15 ರಷ್ಟು ಏರಿಕೆ ಮಾಡುವಂತೆ ಪ್ರಮುಖ ನಿರ್ಧಾರ ಆಗುತ್ತದೆ. ಓರ್ವ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನಂಥ ಅರ್ಥ. ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ. ಹೀಗೆ ಮುಂದುವರೆದರೆ ನಿಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಕಚಿತ ಎಂದು ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.