ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ವಶದಲ್ಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಕೋರ್ಟ್ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಡಿ.ಕೆ. ಶಿವಕುಮಾರ್ ಅವರ ಇಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ, ಇಂದು ಮಧ್ಯಾಹ್ನ ಇಡಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಡಿಕೆಶಿ ಅವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಜಾಮೀನು ನೀಡಬೇಕು ಎಂದು ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದ್ದು, ಇಡಿ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಅವರು ವಿಚಾರಣೆ ಪೂರ್ಣಗೊಂಡಿಲ್ಲ ನೀವು 4ದಿನ ನಮ್ಮ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದ್ದೆವು. ಆದರೆ ಅವರನ್ನು ನಮ್ಮ ಕಸ್ಟಡಿಗೆ ನೀಡಿದ್ದರೂ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಅವರಿಗೆ ಜಾಮೀನು ನೀಡಬೇಡಿ ಎಂದು ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ಕೋರ್ಟ್ ಡಿಕೆಶಿ ಅವರಿಗೆ ಒಂದು ದಿನದ ನ್ಯಾಯಾಂಗ ಬಂಧನವನ್ನು ವಿಧಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.










