ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಆರೋಪ ; ಹತ್ತು ಸಾವಿರ ರೂ.ದಂಡ…

104
firstsuddi

ಹುಬ್ಬಳ್ಳಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಮೇ 31 ರಂದು ಸಂಜೆ ನಗರಕ್ಕೆ ಆಗಮಿಸಿದ್ದ ಡಿ.ಕೆ. ಶಿವಕುಮಾರ್ ಅವರು ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಬುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸಿಜನ್ ಇತ್ಯಾದಿ ಸೌಲಭ್ಯಗಳಿಗೆ ಚಾಲನೆ ನೀಡಿದ್ದರು. ಈ ವೇಳೆ ಜನಜಂಗುಳಿಯೇ ಸೇರಿತ್ತು. ಸಾಮಾಜಿಕ ಅಂತರ ಕಾಪಾಡದೇ ಇರುವುದು. ಸರಿಯಾಗಿ ಮಾಸ್ಕ್ ಧರಿಸದ ಹಿನ್ನೆಲೆ ಹಾಗೂ ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ ಹಾಕಿದ ಆರೋಪದ ಮೇಲೆ ಮಹಾನಗರ ಪಾಲಿಕೆ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿದ ಪಾಲಿಕೆ ಪರಿಸರ ಎಂಜಿನಿಯರ್ ನಯನ ಅವರು, ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣ ದಂಡ ವಿಧಿಸಿರುವುದಾಗಿ ತಿಳಿಸಿದ್ದಾರೆ.