ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ – ಎರಡು ವಾರಗಳಲ್ಲಿ ಮೂರನೇ ಪ್ರಕರಣ…

54
firstsuddi

ಚೆನ್ನೈ : ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ನಡೆದಿರುವ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ ಡೆತ್​ ನೋಟ್​ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಪೋಷಕರು ಐಎಎಸ್ ಮಾಡುವಂತೆ ಒತ್ತಡ ಹಾಕಿದ್ದರಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗ್ತಿದೆ.

ಕಳೆದ ಜುಲೈ 13ರಂದು ಕಲ್ಲಕುರಿಚಿ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ರಾಜ್ಯದಲ್ಲಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ನಿನ್ನೆ ಸಹ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲ್ ನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿದ್ಯಾರ್ಥಿಗಳ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಆತ್ಮಹತ್ಯೆಯ ಆಲೋಚನೆಗಳಿಂದ ದೂರವಿಡುವಂತೆ ಯುವಜನತೆಯಲ್ಲಿ ಮನವಿ ಮಾಡಿದ್ದಾರೆ.