ತೀವ್ರ ವಿರೋಧದ ನಡುವೆಯೂ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ…

88
firstsuddi

ಬೆಳಗಾವಿ : ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ತಾಲೂಕಿನ ಬಡಸ್ ಗ್ರಾಮದಲ್ಲಿ ನೆರವೇರಿತು. ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇಂದು ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಬೇಗ ಅಂತ್ಯಕ್ರಿಯೆ ಮುಗಿಸುವಂತೆ ಗ್ರಾಮಸ್ಥರು ಕೋರಿದ್ದರು. ಜೊತೆಗೆ ನ್ಯಾಯಕ್ಕಾಗಿ ಹೋರಾಟ ಮಾಡೋಣ. ಬಾಕಿ ಬಿಲ್ ಮಂಜೂರಾತಿ ಹಾಗೂ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸೋಣ ಎಂದು ಪ್ರತಿಭಟನಾಕರರಿಗೆ ಹೇಳಿದ್ದಾರೆ. ಬಳಿಕ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತಂದು, ಲಿಂಗಾಯತ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಅಡಿವೇಶ ಇಟಗಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ್ದು, ಪರಿಹಾರ ಘೋಷಣೆ ಮಾಡಬೇಕು ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಎಂದು ಆಗ್ರಹಿಸಿದರು. ಅಲ್ಲದೇ ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಇಲ್ಲವೇ ಬಿಜೆಪಿ ಮುಖಂಡರು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಅಡಿವೇಶ ಇಟಗಿಗೆ ಸಾಥ್ ನೀಡಿದರು. ಗ್ರಾಮಸ್ಥರು ಇವರ ಪ್ರತಿಭಟನೆಗೆ ವಿರೋಧಿಸಿದ್ದು, ನ್ಯಾಯಕ್ಕಾಗಿ ಹೋರಾಡೋಣ, ಈಗ ಅಂತ್ಯಕ್ರಿಯೆ ನೆರವೇರಿಸೋಣ ಎಂದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.