ಬೆಂಗಳೂರು : ತೌಕ್ತೆ ಚಂಡಮಾರುತದ ಹಿನ್ನಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ, ಮಲೆನಾಡು ಭಾಗದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕೆಲವು ಕಡೆಗಳಲ್ಲಿ 20 ಸೆ.ಮೀ ಗಳಿಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಬೆಂಗಳೂರಿನಲ್ಲಿ ಇಂದು ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಮೇ.18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬೀ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತ ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಠಿಸಿದ್ದು, ದೇವರನಾಡಲ್ಲಿ ಭಾರೀ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ತಲೆದೋರಿದೆ. ಕೇರಳದ ಸಮುದ್ರ ಭಾಗದ ಕೆಲವೆಡೆ ರಸ್ತೆಗಳೇ ಕೊಚ್ಚಿ ಹೋಗಿದೆ ಎಂದು ವರದಿಯಾಗಿದ್ದು, ಕೇರಳದ ತಿರುನಂತಪುರಂ, ಕಾಸರಗೋಡು ಸೇರಿ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಮೇ.18ರವರೆಗೆ ತೌಕ್ತೆ ಚಂಡಮಾರುತ ಮಹಾರಾಷ್ಟ್ರ, ಗುಜರಾತ್ ಗೂ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.










