ಬೆಂಗಳೂರು : ಗುಂಡ್ಲುಪೇಟೆಯಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದು, ಗುಂಡ್ಲಪೇಟೆ ತಾಲ್ಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.











