ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 47 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ದೆಹಲಿಯಲ್ಲಿ ಸುದೀರ್ಘ ಅವಧಿಯ ಬಳಿಕ ಅಧಿಕಾರ ಹಿಡಿದಿದೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ. ಸಹಜವಾಗಿಯೇ ದೆಹಲಿ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ಕುರಿತು ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್ದೇವ್ ಮಾತನಾಡಿದ್ದು, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಹೈಕಮಾಂಡ್ ನಿರ್ಧಾರವೇ ಉತ್ತರವಾಗಿರಲಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ ದೆಹಲಿಯ ಸಿಎಂ ಹುದ್ದೆಗೆ ಕೆಲವು ನಾಯಕರ ಹೆಸರು ಮುಂಚೂಣಿಯಲ್ಲಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ನವದೆಹಲಿ ಕ್ಷೇತ್ರದಿಂದ ಸೋಲಿಸಿದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ದೆಹಲಿ ಸಿಎಂ ಹುದ್ದೆಯ ರೇಸ್ ನಲ್ಲಿರುವ ಪ್ರಮುಖ ನಾಯಕರಾಗಿದ್ದಾರೆ. ಇವರಷ್ಟೇ ಅಲ್ಲದೇ ದೆಹಲಿಯ ರೋಹಿಣಿ ಕ್ಷೇತ್ರದಲ್ಲಿ ಸತತವಾಗಿ ಜಯ ಸಾಧಿಸಿರುವ ಬಿಜೆಪಿಯ ಹಿರಿಯ ನಾಯಕ ವಿಜಯೇಂದ್ರ ಗುಪ್ತ ಅವರೂ ಮುಖ್ಯಮಂತ್ರಿ ರೇಸ್ ನಲ್ಲಿರುವ ಪ್ರಮುಖ ಅಭ್ಯರ್ಥಿಯಾಗಿದ್ದಾರೆ.










