ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ…

53
firstsuddi

ನವದೆಹಲಿ: ದೇಶದಾದ್ಯಂದ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ದೇಶದ ಎಲ್ಲಾ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್ ಎಂದು ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಪೋಸ್ಟ್ ಮಾಡಿ, ದೇಶದ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಪ್ರಜಾಪ್ರಭುತ್ವದ ಈ ಶುಭ ಸಂದರ್ಭದಲ್ಲಿ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು, ವೀರ ಸೈನಿಕರಿಗೆ ವಂದಿಸುತ್ತೇನೆ. ಬನ್ನಿ, ನಾವೆಲ್ಲರೂ ಒಟ್ಟಾಗಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಪ್ರತಿಜ್ಞೆ ಮಾಡೋಣ ಮತ್ತು ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಕೊಡುಗೆ ನೀಡೋಣ ಎಂದು ಹೇಳಿದ್ದಾರೆ.

ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಪೋಸ್ಟ್ ಮಾಡಿ, ಎಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಾಶಯಗಳು. ಈ ಸಂದರ್ಭದಲ್ಲಿ ರಾಷ್ಟ್ರದ ಅಭ್ಯುದಯಕ್ಕಾಗಿ ದುಡಿದ ಎಲ್ಲಾ ಮಹನೀಯರನ್ನು ಸ್ಮರಿಸೋಣ. ಅನೇಕರ ತ್ಯಾಗ ಬಲಿದಾನಗಳಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವುದರ ಜತೆಗೆ, ಭಾರತವು ಮಹಾನ್ ಜಾಗತಿಕ ಶಕ್ತಿಯಾಗಿ ಅವಿರ್ಭವಿಸುವ ನಿಟ್ಟಿನಲ್ಲಿ ಒಟ್ಟಾಗಿ ದುಡಿಯೋಣ ಹೇಳಿದ್ದಾರೆ.