ಧಾರಾಕಾರ ಮಳೆಗೆ ಗೋಡೆ ಕುಸಿತ – 9 ಮಂದಿ ಸಾವು…

67
firstsuddi

ಲಕ್ನೋ : ಉತ್ತರ ಪ್ರದೇಶದ ಲಕ್ನೋದಲ್ಲಿ ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಮನೆಯ ಗೋಡೆ ಕುಸಿದು ಮೂವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಮತ್ತು ಗಾಯಾಳುಗಳ ಚಿಕಿತ್ಸೆಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಭಾರೀ ಮಳೆಗೆ ಲಕ್ನೋ ತತ್ತರಿಸಿದ್ದು, ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಗೋರಖ್ ಪುರದಲ್ಲಿ 144 ಮಿಮೀ, ಬಹ್ರೈಚ್ ನಲ್ಲಿ 50 ಮಿಮೀ, ಲಕ್ನೋದಲ್ಲಿ 48 ಮಿಮೀ, ಕಾನ್ಪುರದಲ್ಲಿ 43 ಮಿಮೀ, ಓರೈನಲ್ಲಿ 67 ಮಿಮೀ ಮಳೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಮತ್ತು ಮಧ್ಯ ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 17 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.