ಧ್ರುವನಾರಾಯಣ್ ನಿಧನ – ಗಣ್ಯರಿಂದ ಸಂತಾಪ…

51
firstsuddi

ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಧ್ರುವನಾರಾಯಣ್ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಧ್ರುವನಾರಾಯಣ ಅವರು ತುಂಬಾ ಕ್ರೀಯಾಶೀಲರಾಗಿರುತ್ತಿದ್ದರು. ಅವರು ಹೃದಯಘಾತದಿಂದ ನಿಧನ ಹೊಂದಿರುವುದು ಆಘಾತವಾಗಿದೆ. ಚಾಮರಾಜನಗರ ಭಾಗದಲ್ಲಿ ತುಂಬಾ ಚಟುವಟಿಕೆಯಿಂದ ಕೆಲಸ ಮಾಡಿಕೊಂಡಿದ್ರು. ಅವರಿಗೆ ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

ಧ್ರುವನಾರಾಯಣ್ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಆತ್ಮೀಯ ಸ್ನೇಹಿತರಾಗಿದ್ದ ಆರ್. ಧ್ರುವ ನಾರಾಯಣ ಅವರ ಅಕಾಲಿಕ ನಿಧನ ತುಂಬಾ ನೋವು ಉಂಟುಮಾಡಿದೆ. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಧ್ರುವ ನಾರಾಯಣ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತ ಅವರ ಮತ್ತು ಅವರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ ಎಂದು ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

ಆರ್.ಧ್ರುವನಾರಾಯಣ ನಿಧನಕ್ಕೆ ಶಾಸಕ ಜಿ.ಟಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಾಂತವಾಗಿದೆ. ಎಂದೂ ಕೂಡ ದ್ವೇಷದ ರಾಜಕಾರಣ ಮಾಡಿದವರಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಅಭಿವೃದ್ಧಿ ಕೆಲಸಗಳಿಂದ ಜಿಲ್ಲೆಯ ಜನರ ಮನಸು ಗೆದ್ದಿದ್ದರು. ಸ್ನೇಹಿತನ ಅಗಲಿಕೆಯಿಂದ ತುಂಬಾ ದುಃಖ ಆಗಿದೆ. ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.