ಬೆಂಗಳೂರು : ಸ್ಯಾಂಡಲ್ ವುಡ್ನ ನಟ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕನ್ನಡದ ಖ್ಯಾತನಟ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ನೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
46 ವರ್ಷ ವಯಸ್ಸಿನ ಪುನೀತ್ ರಾಜಕುಮಾರ್ ಇಷ್ಟು ಚಿಕ್ಕ ವಯಸ್ಸಿಗೆ ನಮ್ಮನ್ನು ಆಗಲಿರುವುದು ಬಹಳ ನೋವಿನ ಸಂಗತಿ. ಅವರ ಅಗಲಿಕೆ ಚಿತ್ರರಂಗಕ್ಕೆ ತುಂಬಲಾರದ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ಈ ದುಖಃ, ನೋವು ತಡೆದುಕೊಳ್ಳುವ ಶಕ್ತಿಯನ್ನು ಭಗವಮತೆ ಕರುಣಿಸಲಿ ಎಸ್ಎಂ ಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಅವರು ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕನ್ನಡದ ಅತ್ಯಂತ ಪ್ರೀತಿಯ ಕಲಾವಿದ ಶ್ರೀ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲ್ಯದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮನೆ ಮಗನಂತಿದ್ದ ಪುನೀತ್ ಸಾವು ತುಂಬಲಾರದ ನಷ್ಟ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೂ ಪುನೀತ್ ರಾಜಕುಮಾರ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ನಮ್ಮ ನೆರೆಹೊರೆಯವರಾಗಿದ್ದ ಜೊತೆಗೆ ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇಷ್ಟು ಚಿಕ್ಕವಯಸ್ಸಿನಲ್ಲಿ ಅವರನ್ನು ಕೊಂಡೊಯ್ದ ವಿಧಿ ಬಹಳ ಕ್ರೂರಿ ಎಂದಿದ್ದಾರೆ.










