ಬೆಂಗಳೂರು : ನ್ಯಾಯಾಂಗ ನಿಂದನೆ ಆರೋಪದಡಿ ನಿನ್ನೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್ ಗೆ 8ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ವಕೀಲ ಕೆ.ಬಾಲನ್ ಅವರು ಚೇತನ್ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದ ತೀರ್ಪನ್ನ ಪ್ರಶ್ನಿಸಿ, ನಟ ಚೇತನ್ 2 ವರ್ಷಗಳ ಹಿಂದೆ ಟ್ಟೀಟ್ ಮಾಡಿದ್ದರು. ಈಗ ಹಿಜಾಬ್ ಅರ್ಜಿ ವಿಚಾರಣೆ ನಡೆಸುತ್ತಿರುವ ಅದೇ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಟ್ಟೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಚಾರಣೆ ನಡೆಯುವ ಸಂದರ್ಭದಲ್ಲಿ ಜಡ್ಜ್ ಅವರನ್ನು ನಿಂದಿಸುವುದು ಅಪರಾಧ. ಈ ಕಾರಣಕ್ಕೆ ಪೊಲೀಸರು ಚೇತನ್ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದರು.










