ನಮ್ಮ ಮೆಟ್ರೋ ಪ್ರಯಾಣ ದರ ಇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ.

27

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಲ್ಲಿ ಕೆಲವು ಸ್ಟೇಜ್‍ಗೆ ದುಪ್ಪಟ್ಟು ಬೆಲೆ ಏರಿಕೆ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೆಟ್ರೋ ಟಿಕೆಟ್ ಬೆಲೆ ಇಳಿಕೆ ಮಾಡುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿಗಳು ಎಕ್ಸ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು ಮೆಟ್ರೊ ರೈಲು ನಿಗಮ ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಹೆಚ್ಚಳ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ಬೆಲೆ ಹೆಚ್ಚಳವಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‍ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.