ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಮಕ್ಕಳಿಗೂ ಕೋವಿಡ್ ಲಸಿಕೆ : ಆರೋಗ್ಯ ಸಚಿವ ಕೆ.ಸುಧಾಕರ್.

73
firstsuddi

ಬೆಂಗಳೂರು : ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯವಿರುತ್ತದೆ ಎಂದು ಆರೋಗ್ಯ ಸಚಿವ ಡಾ,ಕೆ.ಸುಧಾಕರ್ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ನಿನ್ನೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಮಕ್ಕಳ ಕೊರೋನಾ ಲಸಿಕೆ ಅಭಿವೃದ್ಧಿಪಡಿಸಿರುವ ಜೈಡಸ್ ಕ್ಯಾಡಿಲಾ ಸಂಸ್ಥೆಯೊಂದಿಗೆ ಬೆಲೆ ನಿಗದಿ ಕುರಿತಾಗಿ ಅಂತಿಮ ಹಂತದ ಮಾತುಕತೆ ನಡೆಸುತ್ತಿದೆ. ನವೆಂಬರ್ ವೇಳೆಗೆ ಭಾರತ್ ಬಯೋಟೆಕ್ ಲಸಿಕೆಗೆ ಅನುಮತಿ ಸಿಗಬಹುದು. ಇದೇ ವರ್ಷದ ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ರಾಜ್ಯದಲ್ಲೂ ಲಸಿಕೆ ಲಭಿಸಲಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ 1.48 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ. 18ಕ್ಕಿಂತ ಕಡಿಮೆ ವಯಸ್ಸಿನವರಿಗೆ ಕೊರೊನಾ ಲಸಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರವೇ ಇದಕ್ಕೆ ಅನುಮತಿ ದೊರೆಯುವ ಸಾಧ್ಯತೆ ಇದೆ.

ರಾಜ್ಯದಲ್ಲೂ ಕೋವಿಡ್‌ನ 3ನೇ ಅಲೆಯ ಆತಂಕ ಇದೆ. ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಮೂರನೇ ಅಲೆ ಅಪ್ಪಳಿಸಬಹುದು ಎಂಬ ಶಂಕೆ ಇದೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಜಾತ್ರೆ, ಹಬ್ಬ ಹಾಗೂ ಉತ್ಸವಗಳಲ್ಲಿ ಜನಸಮೂಹ ಸೇರದಂತೆ ಕಡಿವಾಣ ಹಾಕುವುದನ್ನು ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಈಗಲೂ ಷರತ್ತು ವಿಧಿಸಲಾಗಿದೆ. ಆರ್’ಟಿಪಿಸಿಆರ್ ನೆಗೆಟಿವ್ ವರದಿ ಇರಬೇಕು ಎಂದು ಸೂಚಿಸಲಾಗಿದೆ. ಇನ್ನು 2 ಡೋಸ್ ಲಸಿಕೆ ಪಡೆದುಕೊಂಡವರಿಗೆ ಬೂಸ್ಟರ್ ಶಾಟ್ಸ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.