ಬೆಂಗಳೂರು : ಅಥಣಿ ಮತ್ತು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಕಡೆಯ ದಿನದಂದು ಎರಡೂ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹಾಕುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುರು ದಾಶ್ಯಾಳ್ ಅವರು ಬಿಜೆಪಿ ವಿರುದ್ಧ ಬಂಡಾಯವೆದ್ದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿ ಅಥಣಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಅಲ್ಲದೇ ಹಿರೇಕೆರೂರಿನಲ್ಲಿ ಶಿವಾಚಾರ್ಯ ಸ್ವಾಮೀಜಿ ಅವರು ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದರು. ಸ್ವಾಮೀಜಿ ಅವರು ನಾಮಪತ್ರ ಸಲ್ಲಿಸಿದ ದಿನದಿಂದಲೂ ಸಂಸದ ಬಿ.ವೈ ರಾಘವೇಂದ್ರ ಅವರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದರು. ಇಂದು ಶಿವಾಚಾರ್ಯ ಸ್ವಾಮೀಜಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಎರಡೂ ಕ್ಷೇತ್ರದ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.










