ಬೆಂಗಳೂರು : ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರ ಮೂಲಕ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್ ಗೆ ಮನವಿ ಮಾಡಿದರು. ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೆ. ನಟರಾಜನ್ ನೇತೃತ್ವದ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಒಂದು ವೇಳೆ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರೆ, ವಿರೂಪಾಕ್ಷಪ್ಪ ಅವರ ಬಂಧನ ಖಚಿತವಾಗಲಿದೆ.
ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿರೂಪಾಕ್ಷಪ್ಪರಿಗೆ ಲುಕೌಟ್ ನೋಟಿಸ್ ಜಾರಿಗೆ ನಿರ್ಧರಿಸಿದೆ. ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಲುಕೌಟ್ ನೋಟಿಸ್ ಅಂಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.










