ಬೆಂಗಳೂರು: ಬೆಂಗಳೂರು ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಪರಿಣಾಮದಿಂದ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ಅನೇಕ ಕಾರ್ಮಿಕರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳ ಅಡಿ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ ಒಟ್ಟು ಐದು ಜನರ ಶವ ಪತ್ತೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಎನ್‌ಡಿಆರ್‌ಎಫ್ ತಂಡಗಳು ಸತತ 17 ಗಂಟೆಯಿಂದ ಸತತವಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತಿತ್ತು. ಕಟ್ಟಡ ನಿರ್ಮಾಣದಲ್ಲಿ ಸುಮಾರು 15 ಕಾರ್ಮಿಕರು ತೊಡಗಿದ್ದರು. ಬಹುತೇಕ ಕಟ್ಟಡ ನಿರ್ಮಾಣ ಮಾಡಿ, ಕಟ್ಟಡಕ್ಕೆ ಬಣ್ಣ ಹಾಕುವ ಕೆಲಸಗಳು ನಡೆಯುತ್ತಿದ್ದವು ಎಂದು ವರದಿಯಾಗಿದೆ.
ಬೆಂಗಳೂರು ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, 60/40 ಅಳತೆಯ ನಿವೇಶನದಲ್ಲಿಜಾಗದಲ್ಲಿ ಇಷ್ಟು ದೊಡ್ಡ ಕಟ್ಟಡ ಕಟ್ಟಿರುವುದು ದೊಡ್ಡ ಅಪರಾಧ. ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ನೋಟೀಸ್ ನೀಡಿದರೆ ಸಾಲದು ಅದರ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಇದು ನಮಗೆ ದೊಡ್ಡ ಪಾಠವಾಗಿದೆ. ರಕ್ಷಣಾ ಕಾರ್ಯ ಮುಗಿದ ನಂತರ ಮುಂದಿನ ಎರಡು ದಿನಗಳಲ್ಲಿ ಇದರ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಬೆಂಗಳೂರು ನಗರದಾದ್ಯಂತ ಅಕ್ರಮ ಕಟ್ಟಡಗಳ ಬಗ್ಗೆ ಸರ್ವೆ ಕಾರ್ಯ ಮಾಡಲಾಗುವುದು. ಕಟ್ಟಡ ವಿನ್ಯಾಸ ಹೊಂದಿರದವರಿಗೆ ಯಾವುದೇ ಕಾರಣಕ್ಕೂ ನೋಂದಣಿ ಮಾಡಿಕೊಡಬಾರದು ಎಂದು ಕಂದಾಯ ಇಲಾಖೆಗೆ ಸೂಚನೆ ನೀಡಲಾಗುವುದು. ಕಡಿಮೆ ದುಡ್ಡಿಗೆ ನಿವೇಶನ ತೆಗೆದುಕೊಂಡು ಮಾರಾಟ ಮಾಡಲು ಈ ರೀತಿ ಮಾಡಲಾಗುತ್ತದೆ. ಇಂತಹ ಅಕ್ರಮಗಳನ್ನು ತಡೆಗಟ್ಟುವ ಕಾರಣಕ್ಕಾಗಿ ರೇರಾ ಕಾಯ್ದೆ ಜಾರಿಯಲ್ಲಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.










