ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ.

51

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದಾರೆ. ಕೇಂದ್ರ ಗೃಹ ಸಚಿವಾಲಯದಲ್ಲಿದ್ದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಿರ್ಧಾರಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕುಮಾರ್, ಮಾ.15, 2024 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದು, ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ ಅವರ ಸ್ಥಾನವನ್ನು ತುಂಬಲಿದ್ದಾರೆ. 1989 ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ ಅಧಿಕಾರಿ ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಜ.26, 2029 ರವರೆಗೆ ಹುದ್ದೆಯಲ್ಲಿರುವ ಜ್ಞಾನೇಶ್ ಕುಮಾರ್ ಅವರು ಮುಂದೆ 20 ವಿಧಾನಸಭಾ ಚುನಾವಣೆಗಳು, 2027 ರಲ್ಲಿ ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಚುನಾವಣೆಗಳು ಮತ್ತು 2029 ರ ಲೋಕಸಭಾ ಚುನಾವಣೆಯ ಸಿದ್ಧತೆಗಳ ಮೂಲಕ ಆಯೋಗವನ್ನು ಸಂಪೂರ್ಣವಾಗಿ ಮುನ್ನಡೆಸಲಿದ್ದಾರೆ.