ಲಖನೌ: ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ನೀಡಿರುವ ವಿವಾದಿತ ಹೇಳಿಕೆ ವಿರೋಧಿಸಿ ನಿನ್ನೆ ಉತ್ತರಪ್ರದೇಶದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಇದೀಗ ಉತ್ತರಪ್ರದೇಶ ಪೊಲೀಸರು ಹಿಂಸಾಚಾರ ಸೃಷ್ಟಿಸಿದ 227 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಗಲಭೆ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಸೂಚನೆ ನೀಡಿದ್ದಾರೆ.
ಪ್ರಯಾಗ್ ರಾಜ್ ನಲ್ಲಿ 68, ಹತ್ರಾಸ್ ನಲ್ಲಿ 50, ಸಹರಾನ್ ಪುರದಲ್ಲಿ 48, ಅಂಬೇಡ್ಕರ್ ನಗರದಲ್ಲಿ 28, ಮೊರಾದಾಬಾದ್ ನಲ್ಲಿ 25 ಮತ್ತು ಫಿರೋಜಾಬಾದ್ ನಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ನಿನ್ನೆ ಮಸೀದಿಗಳಲ್ಲಿ ಪ್ರಾರ್ಥನೆಯ ನಂತರ ಏಕಾಏಕಿ ಪ್ರವಾದಿ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿದ್ದರು.










