ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸೋನಿಯಾ ಗಾಂಧಿ ಇಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿಚಾರಣೆ ಮುಂದೂಡುವಂತೆ ನಿನ್ನೆ ಇಡಿಗೆ ಪತ್ರ ಬರೆದಿದ್ದರು. ಅವರ ಮನವಿ ಪುರಸ್ಕರಿಸಿದ್ದ ಇಡಿ, ಈಗ ಹೊಸ ಸಮನ್ಸ್ ಜಾರಿ ಮಾಡಿದೆ.
ಜೂನ್ 2ರಂದು ಸೋನಿಯಾ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡಿತ್ತು. ಹಾಗಾಗಿ ಜೂನ್ 12ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋನಿಯಾ ಗಾಂಧಿ ಸೋಮವಾರ ಡಿಸ್ಚಾರ್ಜ್ ಆಗಿ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.










