ಬೆಂಗಳೂರು: ಪಂಚಮಸಾಲಿಗಳಿಗೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಸಮಾಧಾನಗೊಂಡಿರುವ ಜಯಮೃತ್ಯುಂಜಯ ಸ್ವಾಮೀಜಿ ಅವರು ಮುಷ್ಕರವನ್ನು ಅಂತ್ಯಗೊಳಿಸಿದ್ದಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮುಖಂಡರೊಂದಿಗೆ ಸಭೆ ನಡೆಸಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಈ ಘೋಷಣೆ ಹೊರಬಿದ್ದ ಬೆನ್ನಲ್ಲೇ ಪಂಚಮಸಾಲಿ ಸಮುದಾಯದ ಕೆಲ ಮುಖಂಡರು ಹೋರಾಟ ಅಂತ್ಯಗೊಳಿಸಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಈ ವೇಳೆ ಸ್ವಾಮೀಜಿ ಎದುರೇ ಕೆಲ ಮುಖಂಡರ ನಡುವೆ ಜಟಾಪಟಿ ಏರ್ಪಟ್ಟಿತು. ಇದರ ನಡುವೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸಭೆಯಿಂದ ಅರ್ಧಕ್ಕೆ ಎದ್ದು ಹೋದ ಘಟನೆ ನಡೆದಿದೆ.
ಹೋರಾಟ ಅಂತ್ಯಗೊಳಿಸಿ ನಂತರ ಮಾತನಾಡಿದ ಸ್ವಾಮೀಜಿ ಭಾವುಕರಾದರು. ದೇವರು ನಮಗೆ 2% ಮೀಸಲಾತಿಯನ್ನು ಕರುಣಿಸಿದ್ದಾರೆ. ಹೊಟ್ಟೆ ತುಂಬಾ ಊಟ ಸಿಕ್ಕಿಲ್ಲ. ಆದರೆ ಹಸಿದ ಹೊಟ್ಟೆಗೆ ಪ್ರಸಾದ ಸಿಕ್ಕಿದಂತೆ ಆಗಿದೆ. ನೀತಿಸಂಹಿತೆ ಜಾರಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮುಂದೆ ಯಾವ ಸರ್ಕಾರ ಆಡಳಿತಕ್ಕೆ ಬರುತ್ತದೆಯೋ ಗೊತ್ತಿಲ್ಲ. ದೊಡ್ಡ ದೊಡ್ಡ ಮಠದವರು ನನಗೆ ಬೆಂಬಲ ಕೊಟ್ಟಿಲ್ಲ. ನಮ್ಮ ಹೋರಾಟದ ಪರಿಣಾಮ ಇಡೀ ಲಿಂಗಾಯತ ಸಮುದಾಯಕ್ಕೆ ಅನುಕೂಲವಾಗಿದೆ. ಚುನಾವಣೆ ಮುಗಿದ ನಂತರ ಹೋರಾಟ ಮುಂದುವರೆಸೋಣ ಎಂದು ಹೇಳಿದರು.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ಆದಷ್ಟು ಬೇಗ ಅಧಿಸೂಚನೆ ಆಗುವಂತೆ ನೋಡಿಕೊಳ್ಳುತ್ತೇನೆ ಎಂದರು. ನಾವು 2ಎ ಅಡಿಯಲ್ಲಿ ಮೀಸಲಾತಿಗೆ ಒತ್ತಾಯಿಸಿದ್ದೇವೆ. ಆದರೆ ಆ ವರ್ಗೀಕರಣದಲ್ಲಿ ಈಗಾಗಲೇ 101 ಜಾತಿಗಳು ಇರುವುದರಿಂದ ಸರ್ಕಾರವು ನಮಗೆ 2ಡಿ ನೀಡಿದೆ. ನಮಗೆ 2ಎ ಅಡಿಯಲ್ಲಿ ಒದಗಿಸಲಾದ ಎಲ್ಲಾ ಮೀಸಲಾತಿಗಳನ್ನು ನೀಡಲಾಗಿದೆ. ಅಮಿತ್ ಶಾ ಮತ್ತು ಜೆಪಿ ನಡ್ಡಾ ನನ್ನೊಂದಿಗೆ 3 ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದರು.










