ಚಿಕ್ಕಮಗಳೂರು : ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರುವ ಮೂಲಕ ಮಹಿಳೆಯರು ಮತ್ತು ಸಾಮಾನ್ಯ ಜನರಿಗೂ ಅಧಿಕಾರದ ಚುಕ್ಕಾಣಿ ಹಿಡಿಯಲು ಅವಕಾಶ ಮಾಡಿಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂದು ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.
ನಗರದ ಕಾಂಗ್ರೆಸ್ ಕಛೇರಿಯಲ್ಲಿ ನಿನ್ನೆ ಏರ್ಪಡಿಸಿದ್ದ ರಾಜೀವ್‍ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಮಟ್ಟದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮಾಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಟ ರಾಜೀವ್‍ಗಾಂಧಿಯವರು ಪ್ರಧಾನಿಯಾಗಿದ್ದಾಗ ಪಂಚಾಯತ್‍ರಾಜ್ ವ್ಯವಸ್ಥೆಯನ್ನು ಮೊದಲು ಜಾರಿಗೆ ತರಲು ಪ್ರಯತ್ನಿಸಿದ್ದರು. ಆದರೆ ಸಂಸತ್ತಿನಲ್ಲಿ ಬಹುಮತದ ಕೊರತೆಯಿಂದಾಗಿ ಅದು ಸಾಧ್ಯವಾಗಿರಲಿಲ್ಲ ಎಂದರು.
ನಂತರ ಕಾಂಗ್ರೆಸ್ ನಾಯಕ ಪಿ.ವಿ.ನರಸಿಂಹರಾವ್ ಅವರು ಪ್ರಧಾನಿಯಾಗಿದ್ದಾಗ ಪಂಚಾಯತ್‍ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದರು. ಇದರಿಂದಾಗಿ ಮಹಿಳೆಯರು ಮತ್ತು ಸಾಮಾನ್ಯ ಜನರೂ ಸಹ ಚುನಾವಣೆಗಳಲ್ಲಿ ಸ್ಪರ್ಧಿಸಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ತಿಳಿಸಿದರು.
ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ರಾಷ್ಟ್ರೀಯ ಸಲಹೆಗಾರ ಎಂ.ಐ.ಘೋರ್ಪಡೆ ಮಾತನಾಡಿ ಅಧಿಕಾರ ವೀಕೇಂದ್ರೀಕರಣಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಪಂಚಾಯತ್‍ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದಿತು ಎಂದು ಹೇಳಿದರು.
ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ರಾಜ್ಯ ಸಂಚಾಲಕ ವಿಜಯ್‍ಸಿಂಗ್ ಮಾತನಾಡಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಳೆದ ಎರಡು ತಿಂಗಳಿನಿಂದ ರಾಜ್ಯಾದ್ಯಂತ ಪ್ರವಾಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಪಂಚಾಯತ್‍ರಾಜ್ ವ್ಯವಸ್ಥೆಯಿಂದಾಗಿ ಮಹಿಳೆಯರು ಮತ್ತು ಸಾಮಾನ್ಯರಿಗೆ ಮೀಸಲಾತಿ ದೊರೆತು ನೇರವಾಗಿ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ|| ಕೆ.ಪಿ.ಅಂಶುಮಂತ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವೆ ಮೋಟಮ್ಮ, ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ರೇಖಾಹುಲಿಯಪ್ಪಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಡಾ|| ಡಿ.ಎಲ್.ವಿಜಯ್‍ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ನವೀನ್ ಕೊಪ್ಪ, ಜೆ.ವಿನಾಯಕ, ಸಿ.ಎನ್.ಅಕ್ಮಲ್ ಉಪಸ್ಥಿತರಿದ್ದರು.










