ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ…

56
firstsuddi

ಬೆಂಗಳೂರು : ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹಿನ್ನಡೆಯಾಗಿದ್ದು, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯಾವುದೇ ಭಾಷೆಯ ಕಲಿಕೆ ಕಡ್ಡಾಯ ಅಲ್ಲವೆಂದು ಕೇಂದ್ರ ಸರ್ಕಾರ ಈಗಾಗಲೇ ತನ್ನ ನಿಲುವು ಸ್ಪಷ್ಟಪಡಿಸಿದೆ. ಅದರಂತೆ, ರಾಜ್ಯದ ನಿಲುವು ಕೇಂದ್ರದ ನೀತಿಗೆ ವಿರುದ್ಧವಾಗಿದೆ. ಇನ್ನು ಕಡ್ಡಾಯ ಕಲಿಕೆ ವಿಚಾರವನ್ನು ಮರುಪರಿಶೀಲಿಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸರ್ಕಾರಕ್ಕೆ ನ್ಯಾಯಾಲಯವೂ ಮೊದಲಿನಿಂದ ಹೇಳುತ್ತಲೇ ಬಂದಿದೆ. ಆದ್ದರಿಂದ, ಸರ್ಕಾರದ ಆದೇಶಕ್ಕೆ ತಡೆ ನೀಡುತ್ತಿದ್ದೇವೆ ಎಂದು ಪೀಠ ಸ್ಪಷ್ಟಪಡಿಸಿದೆ.

ರಾಜ್ಯದ ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ವ್ಯಾವಹಾರಿಕ ಮಟ್ಟದಲ್ಲಿ ಕಲಿಸಲು ರಾಜ್ಯ ಸರ್ಕಾರ 2021ರ ಆಗಸ್ಟ್ 7 ಮತ್ತು ಸೆಪ್ಟೆಂಬರ್ 15ರಂದು ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.