ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನೂ ಚುನಾವಣೆಗೆ ಬಳಸಿಕೊಂಡಿದ್ದಾರೆ: ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ.

27

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನೂ ಕಾಂಗ್ರೆಸ್ ಚುನಾವಣೆಗೆ ಬಳಸಿಕೊಂಡಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನ ಗೆದ್ದಿದೆ. ಅದರಿಂದ ಉಪಯೋಗವೇನು. ಕಾಂಗ್ರೆಸ್ ಯಾವ ರೀತಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರ್ಕಾರ. ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನೂ ಚುನಾವಣೆಗೆ ಬಳಸಿಕೊಂಡಿದ್ದಾರೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರ್ಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಸತ್ಯವನ್ನು ಹೇಳಿದರೆ, ನಿಮಗೆ ಅರಗಿಸಿಕೊಳ್ಳುವುದು ತುಂಬಾ ಕಷ್ಟ ಎಂದು ಕಿಡಿಕಾರಿದರು.