ಬೀದರ್: ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ಪರಿಶಿಷ್ಟ ಪಂಗಡದವರ ಮೇಲೆ ಸವರ್ಣೀಯರು ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 3 ರಂದು ಹನುಮಾನ ದೇವರ ಜಾತ್ರಾ ಮಹೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದವರ ಜೊತೆಗೆ ಪರಿಶಿಷ್ಟ ಜನಾಂಗದವರು ನವೆಂಬರ್ 4 ರಂದು ಚಳಕಾಪುರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಲಿಂಗಾಯತ ಸಮುದಾಯದ 73 ಜನರ ವಿರುದ್ಧ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಪೈಕಿ 15 ಜನರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ನವೆಂಬರ್ 3 ರಂದು ಸಂಜೆ 7.45ಕ್ಕೆ ಚಳಕಾಪುರ ಗ್ರಾಮದಲ್ಲಿ ಸವರ್ಣೀಯರು ದಲಿತರ ಕಾಲೋನಿಗಳಿಗೆ ನುಗ್ಗಿದ್ದು, ಈ ವೇಳೆ ಜಾತಿ ನಿಂದನೆ ಮಾಡಿ, ಮಹಿಳೆಯರು, ಮಕ್ಕಳು ಹಾಗೂ ವೃದ್ಧರನ್ನು ಮನಬಂದಂತೆ ಥಳಿಸಿದರು ಎಂದು ಧನರಾಜ್ ದೊಡ್ಡಮನಿ ಎಂಬುವವರು ದೂರಿನಲ್ಲಿ ಆರೋಪಿಸಿದ್ದಾರೆ.










