ಪರೇಶ್ ಮೇಸ್ತ ಸಾವಿನ ಸಿಬಿಐ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ : ಸಿದ್ದರಾಮಯ್ಯ

51
firstsuddi

ಬೆಂಗಳೂರು : 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪರೇಶ್ ಮೇಸ್ತ ಸಾವಿನ ಪ್ರಕರಣದ ಕುರಿತಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು, ಇದು ಕೊಲೆಯಲ್ಲ ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು.

ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಬರೆದುಕೊಳ್ಳುವ ಮೂಲಕ ಸಿದ್ಯರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಏನಿದು ಘಟನೆ? : 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತ ಕಾಣೆಯಾಗಿದ್ದ. 8ರಂದು ಹೊನ್ನಾವರ ನಗರದ ಶನಿದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಮೇಸ್ತನನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ವಿಸ್ತೃತ ತನಿಖೆ ನಡೆಸಿ ನಾಲ್ಕೂವರೆ ವರ್ಷದ ನಂತರ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.