ಬೆಂಗಳೂರು : ಸ್ಯಾಂಡಲ್ ವುಡ್ ನ ನಟ, ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್(46) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ನಸುಕಿನ ಜಾವ ಎಂದಿನಂತೆ ಜಿಮ್ ನಲ್ಲಿ ದೇಹ ಕಸರತ್ತು ನಡೆಸುತ್ತಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತು. ಆಗ ಆಸ್ಪತ್ರೆಯಲ್ಲಿ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಪುನೀತ್ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅಸುನೀಗಿದ್ದಾರೆ.
ಪುನೀತ್ 1975 ಮಾರ್ಚ್17 ರಂದು ಡಾ.ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ ಜನಿಸಿದರು. ಪುನೀತ್ 1999 ಡಿಸೆಂಬರ್1 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ದ್ರಿತಿ ಮತ್ತು ವಂದಿತಾ ಇಬ್ಬರು ಪುತ್ರಿಯರಿದ್ದಾರೆ .
ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ತೆರೆಮೇಲೆ ಬಂದಿದ್ದರು. ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಪವರ್ ಸ್ಟಾರ್ ಇನ್ನಿಲ್ಲ ಎನ್ನುವ ಸುದ್ಧಿ ಅಭಿಮಾನಿಗಳಿಗೆ ಆಘಾತವಾಗಿದೆ.










