ನವದೆಹಲಿ : ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಅವಘಡದಲ್ಲಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತರನ್ನು 30 ರಿಂದ 35 ವರ್ಷ ವಯಸ್ಸಿನವರೆಂದು ಗುರುತಿಸಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಇಂದು ಬೆಳಗ್ಗೆ 9.35ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿರುವ ಮಾಹಿತಿ ಸಿಕ್ಕಿದೆ. ಕೂಡಲೇ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ದೆಹಲಿ ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಘಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ದುರಂತಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.










