ಪಿಎಫ್‍ಐ ಬ್ಯಾನ್: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ ಎಂದ ಸಿಎಂ ಬೊಮ್ಮಾಯಿ.

67
firstsuddi

ಬೆಂಗಳೂರು : ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಅಮಿತ್ ಶಾ ಅವರ ನಾಯಕತ್ವ ಇರುವಾಗ ಯಾವುದೇ ದುಷ್ಕೃತ್ಯಗಳಿಗೆ ಅವಕಾಶ ನೀಡುವುದಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ ಎಂದರು.

ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಕೂಡ ಪಿಎಫ್ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಪಿಎಫ್ಐ ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಡೆ ಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು,ಕೇಂದ್ರ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಪಿಎಫ್ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ ಯುಎಪಿಎ ಕಾಯಿದೆ ಅಡಿಯಲ್ಲಿ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದರು.

ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.