ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ರೈತಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ಅವರು ರೈತ ವಿರೋಧಿ ನೀತಿಯನ್ನು ವಿರೋಧಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಮೆಜೆಸ್ಟಿಕ್ ಮುಂಭಾಗ ಪೇಟ ತೊಟ್ಟು ಶೇರ್ವಾನಿ ಧರಿಸಿ ಕತ್ತೆಯ ಮೇಲೆ ಕುಳಿತುಕೊಂಡು ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ವಾಟಾಳ್ ನಾಗಾರಾಜ್ ಅವರಿಗೆ ಕನ್ನಡಪರ ಸಂಘಟನೆಯ ಮುಖಂಡರು ಹಾಗೂ ಬೆಂಬಲಿಗರು ಸಾಥ್ ನೀಡಿದರು.










