ವಯನಾಡು : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಇಂದು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು ಜನಿಸಿದ ದಿನದಿಂದಲೂ ನನಗೆ ಅವರ ಬಗ್ಗೆ ತಿಳಿದಿದೆ. ಆದ್ದರಿಂದಲೇ ಅವರ ಪರವಾಗಿ ಮತ ಪ್ರಚಾರಕ್ಕೆ ಇಲ್ಲಿಗೆ ಬಂದಿದ್ದೇನೆ. ಕಳೆದ 10 ವರ್ಷಗಳಿಂದ ರಾಹುಲ್ ಗಾಂಧಿ ಅವರ ನಿಜವಾದ ವ್ಯಕ್ತಿತ್ವವನ್ನು ಮುಚ್ಚಿಟ್ಟು ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಬಿಜೆಪಿ ಪಕ್ಷ ಸೇರಿದಂತೆ ಬೇರೆ ಪಕ್ಷದ ಮುಖಂಡರು ಯತ್ನಿಸುತಿದ್ದಾರೆ. ರಾಹುಲ್ ಗಾಂಧಿ ಅವರು ಕಳೆದ 10ವರ್ಷಗಳಿಂದ ಪ್ರತಿಪಕ್ಷಗಳ ಟೀಕೆಗೆ ಒಳಗಾಗಿದ್ದಾರೆ. ಆದರೆ ಈಗಾ ಎದುರಾಳಿಗಳಿಗೆ ತಕ್ಕ ಪಾಠ ಕಲಿಸುವ ಸಮಯ ಬಂದಿದೆ. ಕಳೆದ 5 ವರ್ಷಗಳ ಹಿಂದೆ ಬಿಜೆಪಿ ಪಕ್ಷದ ಮೇಲೆ ಜನರು ಅಪಾರ ನಂಬಿಕೆಯನ್ನು ಇಟ್ಟಿದ್ದರು. ಆದರೆ ಬಿಜೆಪಿಯವರು ಜನರ ನಂಬಿಕೆಗೆ ದ್ರೋಹ ಮಾಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿರುವುದು ಅವರ ಅಭಿವೃದ್ಧಿಗಾಗಿಯೇ ಹೊರತು. ಜನಸಾಮಾನ್ಯರ ಅಭಿವೃದ್ಧಿಗಾಗಿ ಅಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಣವನ್ನು ಹಾಕುವುದಾಗಿ ಭರವಸೆ ನೀಡಿದ್ದರು ಆದರೆ ಅದು ಸುಳ್ಳು ಭರವಸೆ ಎಂದು ಈಗಾ ಎಲ್ಲರಿಗೂ ತಿಳಿದು ಬಂದಿದೆ ಎಂದು ಹೇಳಿದ್ದಾರೆ.










