ಬೆಂಗಳೂರು : ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ ಫ್ಯೂಚರ್ ಡಿಜಿಟಲ್ ಜಾಬ್ಸ್ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಚಾಲನೆ ನೀಡಿದರು. ವಿಧಾನಸೌಧದಲ್ಲಿ ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಂಸ್ಥೆಗಳು ಒಡಂಬಡಿಕೆಗೆ ಸಹಿ ಹಾಕಿದವು.
ಫ್ಯೂಚರ್ ಡಿಜಿಟಲ್ ಜಾಬ್ಸ್ ಉಪಕ್ರಮಕ್ಕೆ ಹಸಿರು ನಿಶಾನೆಯನ್ನು ತೋರಿಸಿದ ಸಚಿವರು ಈ ಕಾರ್ಯಕ್ರಮದಿಂದ ರಾಜ್ಯದ 92 ಸರ್ಕಾರಿ ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಅವರ ಕನಸಿನ ಉದ್ಯೋಗ ಸಿಗಲಿದೆ. ಇದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿದೆ. ಈ ನೂತನ ಕಾರ್ಯಕ್ರಮದ ಅನ್ವಯ ಸರ್ಕಾರಿ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಫ್ಯೂಚರ್ ಡಿಜಿಟಲ್ ಜಾಬ್ಸ್ ಯೋಜನೆಯನ್ನು ಒಂದು ವಿಶೇಷ ಆಂದೋಲನದಂತೆ ಹಮ್ಮಿಕೊಳ್ಳಲಾಗುವುದು. ಜೊತೆಗೆ ಅರ್ಥಪೂರ್ಣ ಇಂಟರ್ನ್ ಶಿಪ್, ಪ್ರಾಜೆಕ್ಟ್ ಗಳು ಮತ್ತು ಉದ್ಯೋಗ ನೇಮಕಾತಿ ಕನಸು ನನಸಾಗುವಂತೆ ವೃತ್ತಿ ಸಮಾಲೋಚನೆ ಹಾಗೂ ಮಾರ್ಗದರ್ಶನವನ್ನು ನೀಡಲಾಗುವುದು ಎಂದು ಹೇಳಿದರು.
ಸರ್ಕಾರಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಪರಿಪೋಷಣೆ ಮತ್ತು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಉದ್ಯಮಗಳೊಂದಿಗೆ ಸೇರಿಕೊಂಡು ತಾಂತ್ರಿಕ ಶಿಕ್ಷಣದ ಪಠ್ಯಕ್ರಮವನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಅಭಿವೃದ್ಧಿ ಪಡಿಸಿ, ಬೋಧನಾ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುವುದು. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕೆಡಿಇಎಂ ನಡುವಿನ ಒಡಂಬಡಿಕೆಯು ಬೆಂಗಳೂರಿನಿಂದ ಹೊರಗಿರುವ ಕೈಗಾರಿಕೋದ್ಯಮಗಳಲ್ಲಿ ವಿದ್ಯಾರ್ಥಿಗಳು ಅಲ್ಲಿರುವ ಉದ್ಯೋಗಗಳನ್ನು ಕುರಿತು ಸಂಶೋಧನೆ ನಡೆಸಲು ಅನುವು ಮಾಡಿಕೊಡಲಿದೆ. ಜೊತೆಗೆ ಉದ್ಯಮಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ಒದಗಿಸಲಿದ್ದು, ನಿಯಮಿತವಾಗಿ ವಿಚಾರ ಸಂಕೀರಣಗಳನ್ನು ಕೂಡ ಆಯೋಜಿಸಲಾಗುವುದು. ಇದರಿಂದ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ ಎಂದು ಸಚಿವರು ಹೇಳಿದರು.










