ಪ್ರಯಾಗ್‍ರಾಜ್: ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಮೃತಪಟ್ಟಿರುವ ದುರಂತಘಟನೆ ನಡೆದಿದೆ. ಪ್ರಯಾಗ್‍ರಾಜ್, ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‍ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‍ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‍ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.










