ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿದ್ದೆಂದು ಹೇಳಲಾಗಿದ್ದ ಐವಿ ದ್ರಾವಣ ಉತ್ಪಾದಿಸದಂತೆ ಪಶ್ಚಿಮ್ ಬಂಗಾ ಫಾರ್ಮಾಸ್ಯೂಟಿಕಲ್ ಕಂಪನಿಗೆ ನಿರ್ಬಂಧ ಹೇರಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದಲ್ಲಿ ಇಂದು ಬಾಣಂತಿಯರ ಸಾವುಗಳ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಮಾಹಿತಿ ನೀಡಿದ ಸಚಿವರು, ಈ ವಿಷಯವನ್ನು ಸದನದ ಗಮನಕ್ಕೆ ತಂದರು. ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಸಿದ್ದ ಪಶ್ಚಿಮ್ ಬಂಗಾ ಕಂಪನಿಯನ್ನು ಈಗಾಗಲೇ ರಾಜ್ಯ ಸರ್ಕಾರ ‘ಬ್ಲಾಕ್ ಲಿಸ್ಟ್’ಗೆ ಸೇರಿಸಿದೆ. ಪ್ರಕರಣದ ತನಿಖೆ ಅಂತ್ಯಗೊಳ್ಳುವವರೆಗೆ ವಿವಾದಾತ್ಮಕವಾಗಿರುವ ಐವಿ ದ್ರಾವಣ ಉತ್ಪಾದನೆ ಮಾಡದಂತೆ ಕಂಪನಿಯ ಮೇಲೆ ನಿಬರ್ಂಧ ಹೇರಲಾಗಿದೆ ಎಂದು ಸಚಿವರು ತಿಳಿಸಿದರು. ದೇಶದಲ್ಲಿ ಔಷಧ ನಿಯಂತ್ರಣ ವ್ಯವಸ್ಥೆಯಲ್ಲಿರುವ ಲೋಪದೋಷಗಳು ಈ ರೀತಿಯ ಪ್ರಕರಣಗಳಿಗೆ ಕಾರಣವಾಗಿದೆ ಎಂದು ಈ ಸಂದರ್ಭದಲ್ಲಿ ಸಚಿವರು ಹೇಳಿದರು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ತಜ್ಞ ವೈದ್ಯರ ತಂಡ ರಚಿಸಿ ಪರಿಶೀಲಿಸಲಾಗಿತ್ತು. ತಜ್ಞರ ತಂಡ ಐವಿ ರಿಂಗರ್ ಲ್ಯಾಕ್ಟೇಟ್ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ತಜ್ಞರ ತಂಡದ ವರದಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಂಪನಿ ಪೂರೈಸಿದ್ದ ಎಲ್ಲ ಬ್ಯಾಚ್‍ಗಳ ದ್ರಾವಣವನ್ನು ತಡೆಹಿಡಿದು, ಟೆಸ್ಟಿಂಗ್ ಮಾಡಿಸಲಾಗಿದೆ. ಅಲ್ಲದೇ ಉತ್ತಮ ಗುಣಮಟ್ಟ ಹೊಂದಿರದ 9 ಬ್ಯಾಚ್‍ಗಳ ದ್ರಾವಣ ಪೂರೈಕೆ ಹಿನ್ನೆಲೆಯಲ್ಲಿ ಕಂಪನಿಯವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.










