ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿಚಾರವಾಗಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬ ಕೆಪಿಸಿಸಿ ಸದಸ್ಯ ಬಿ.ಆರ್. ನಾಯ್ಡು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದಾರೆ.
ಬಿಜೆಪಿಯ ‘ನಾನು ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನವನ್ನು ಹಮ್ಮಿಕೊಂಡಿತ್ತು. ಈ ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಂಚಲಾಗಿದೆ. ಜೊತೆಗೆ, ಕಾಂಗ್ರೆಸ್ ಪಕ್ಷವೂ ಕೂಡ ತಿರುಚಿದ ಪೋಸ್ಟ್ ಹಂಚಿಕೊಂಡಿತ್ತು. ಫೋರ್ಜರಿ ಹಾಗೂ ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪವನ್ನೂ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇದೀಗ ಡಿಕೆ ಶಿವಕುಮಾರ್ ಮತ್ತು ಬಿ.ಆರ್.ನಾಯ್ಡು ವಿರುದ್ಧ 153(ಎ), 504, 506,464 ಸೆಕ್ಷನ್ ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.










