ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಲಕ್ಷ್ಮಣ ಸವದಿ.

55
firstsuddi

ಬೆಂಗಳೂರು : ಅಥಣಿ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿಕೊಟ್ಟಿರುವ ಸವದಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಪಕ್ಷದಲ್ಲಿನ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತ ಸವದಿ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಸವದಿ ಭೇಟಿ ಮಾಡಿದ್ದು, ಇಂದು ಸಂಜೆಯೇ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ.

2008ರಲ್ಲಿ ಯಡಿಯೂರಪ್ಪ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಸವದಿ 2011ರಲ್ಲಿ ಯಡಿಯೂರಪ್ಪ ರಾಜೀನಾಮೆ ನಂತರ ಮುಖ್ಯಮಂತ್ರಿಯಾದ ಡಿ.ವಿ ಸದಾನಂದಗೌಡ ಸಂಪುಟದಲ್ಲಿಯೂ ಸಹಕಾರ ಸಚಿವರಾಗಿದ್ದರು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಮೂರನೇ ಬಾರಿಗೆ ಸಚಿವ ಸ್ಥಾನವನ್ನು ಅಲಂಕರಿಸಿದ ಸವದಿ ಉಪಮುಖ್ಯಮಂತ್ರಿ ಸ್ಥಾನದೊಂದಿಗೆ ಸಾರಿಗೆ ಇಲಾಖೆಯ ಜೊತೆ ಹೆಚ್ಚುವರಿಯಾಗಿ ಕೃಷಿ ಖಾತೆಯನ್ನು ಹೊಂದಿದ್ದರು. ಸೋತಿದ್ದರೂ ಪರಿಷತ್ ಸ್ಥಾನ ನೀಡಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ನಂತರ ಬಿ.ಸಿ ಪಾಟೀಲ್ ಸಚಿವರಾದ ಬಳಿಕ ಅವರಿಗೆ ಕೃಷಿ ಖಾತೆ ನೀಡಿ, ಸಾರಿಗೆ ಖಾತೆಯಲ್ಲಿ ಸವದಿ ಮುಂದುವರೆದಿದ್ದರು. ಆದರೆ ಯಡಿಯೂರಪ್ಪ ಮುಖ್ಯಮಮತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದರು. ಆದರೆ ಬೊಮ್ಮಾಯಿ ಸಂಪುಟದಲ್ಲಿ ಸವದಿಗೆ ಅವಕಾಶ ಸಿಗಲಿಲ್ಲ. ಇದೀಗ ಅಥಣಿ ಕ್ಷೇತ್ರದ ಟಿಕೆಟ್ ಕೂಡ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಗೆ ಗುಡ್‍ಬೈ ಹೇಳಿದ್ದಾರೆ.

.