ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಪುತ್ತೂರು, ಸುಳ್ಯ, ಕಡಬ ಸ್ವಯಂಪ್ರೇರಿತ ಬಂದ್…

58
firstsuddi

ಮಂಗಳೂರು : ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಹಿನ್ನಲೆಯಲ್ಲಿ ಜಿಲ್ಲೆಯ ಸುಳ್ಳ, ಕಡಬ ಹಾಗು ಪುತ್ತೂರು ತಾಲುಕುಗಳಲ್ಲಿ ಸ್ವಯಂಪ್ರೇರಿತ ಬಂದ್ ಗೆ ವಿಎಚ್ ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಅಂಗಡಿ ಮುಂಗಟ್ಟು ತೆರೆಯದಂತೆ ಸಂಘಟನೆಗಳು ವಿನಂತಿ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು, ಸುಳ್ಯ ತಾಲೂಕಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಹೇಯ ಕೃತ್ಯವೆಸಗಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನಡಿ ಶಿಕ್ಷಿಸುವುದಾಗಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಜೊತೆಗೆ, ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ನೋವು ಭರಿಸುವ ಶಕ್ತಿಯನ್ನು ದೇವರು ಕುಟುಂಬಕ್ಕೆ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ಯುವ ನಾಯಕ ಆಗಿರುವ 32 ವರ್ಷದ ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ನಿನ್ನೆ ರಾತ್ರಿ ಅಂಗಡಿ ಮುಚ್ಚುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು.