ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಐವರು ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹಂತಕರು ಕೇರಳ ನೋಂದಣಿ ಇರುವ ವಾಹನದಲ್ಲಿ ಬಂದು ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಂತರ ಪತ್ತೆಗೆ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ಕುಮಾರ್ ನೆಟ್ಟಾರು ಅವರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ನಿನ್ನೆ ರಾತ್ರಿ ಬೆಳ್ಳಾರೆ ಪೇಟೆಯಲ್ಲಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು.










