ದೇವನಹಳ್ಳಿ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಮಧ್ಯಪ್ರದೇಶದಿಂದ ಆಗಮಿಸಿದ ಸಿ.ಟಿ. ರವಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಸಂಬಂಧ ಪ್ರತಿಕ್ರಿಯೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಬದಲಾಗದೆ ಇರೋದು ಕಾರ್ಯಕರ್ತ ಅನ್ನೋದು, ನಾನೊಬ್ಬ ಈಗ ಸಾಮಾನ್ಯ ಕಾರ್ಯಕರ್ತ ಅಷ್ಟೇ. 35 ವರ್ಷಗಳ ರಾಜಕೀಯದಲ್ಲಿ ಈಗಾಗಲೇ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತೆ. ಪಕ್ಷ ನೇಮಕ ಮಾಡಿದೆ ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ ಯಶಸ್ವಿಯಾಗಲಿ. ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ. ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೆ ಜವಾಬ್ದಾರಿ ನಿರ್ವಹಿಸಿದ್ದೀನಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.










