ಬಿ.ಆರ್ ಅಂಬೇಡ್ಕರ್‌ರಿಗೆ ಅವಮಾನ : ಜೈನ್ ವಿವಿಯ ಮಾನ್ಯತೆ ರದ್ದುಗೊಳಿಸುವಂತೆ ಒತ್ತಾಯ…

67
firstsuddi

ಚಿಕ್ಕಮಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಪದ ಬಳಸಿರುವ ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ರದ್ದು ಪಡಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದ ಪದಾಧಿಕಾರಿಗಳು ವಿಶ್ವವಿದ್ಯಾನಿಲಯದ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜೈನ್ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕದ ಸಂಭಾಷಣೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ದಲಿತ ಸಮುದಾಯದ ಬಗ್ಗೆ ಅವಾಚ್ಯವಾಗಿ ಮಾತನಾಡುವ ಮೂಲಕ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದರು.

ದೇಶಕ್ಕೆ ಸಂವಿಧಾನ ನೀಡಿರುವ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತ ಸಮುದಾಯದ ಬಗ್ಗೆ ಉದ್ದೇಶಪೂರ್ವಕವಾಗಿ ಅವಹೇಳನಕಾರಿ ಪದ ಬಳಸಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದ ಪದಾಧಿಕಾರಿಗಳು ಕೂಡಲೇ ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಬೇಕು. ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಲ್.ಎಸ್. ಶ್ರೀಕಾಂತ್, ಪದಾಧಿಕಾರಿಗಳಾದ ವಿ.ಎಸ್.ಚಂದ್ರಶೇಖರ್, ನಂಜುಂಡಪ್ಪ, ಪರಮೇಶ್ ಹಾಜರಿದ್ದರು.