ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಮುತ್ಸದ್ದಿ ರಾಜಕಾರಣಿ ಎಸ್‍ಎಂ ಕೃಷ್ಣ ಇನ್ನಿಲ್ಲ. ಈ ಮೂಲಕ ಕರ್ನಾಟಕ ರಾಜಕಾರಣದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಎಸ್.ಎಂ.ಕೃಷ್ಣ ರಾಜ್ಯ ಕಂಡ ಅಪರೂಪದ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸಿನೊಂದಿಗೆ ಸಿಲಿಕಾನ್ ಸಿಟಿಯಾಗಲು ಪ್ರಮುಖ ಕೊಡುಗೆ ನೀಡಿದ್ದರು. ಭೀಕರ ಬರಗಾಲ, ಡಾ.ರಾಜ್ ಕುಮಾರ್ ಅಪಹರಣದಂತಹ ಸಂದಿಗ್ಧ ಸ್ಥಿತಿಯಲ್ಲಿ ರಾಜ್ಯವನ್ನು ಆಳ್ವಿಕೆ ಮಾಡಿದ್ದ ಹೆಗ್ಗಳಿಕೆ ಎಸ್‍ಎಂ ಕೃಷ್ಣ ಅವರದು. ಕಾಂಗ್ರೆಸ್‍ನಿಂದ ಮುಖ್ಯಮಂತ್ರಿ, ಕೇಂದ್ರ ಸಚಿವ, ರಾಜ್ಯಪಾಲರಾಗಿದ್ದ ಕೃಷ್ಣ ಅವರು,ಬದಲಾದ ರಾಜಕೀಯ ಸ್ಥಿತ್ಯಂತರದ ನಡುವೆ ಬಿಜೆಪಿ ಸೇರಿ ರಾಜಕೀಯ ನಿವೃತ್ತಿ ಘೋಷಿಸಿದ್ದರು. 1932ರ ಮೇ 1 ರಂದು ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿ ಪುತ್ರರಾಗಿ ಸೋಮನಹಳ್ಳಿಯಲ್ಲಿ ಜನಿಸಿದ ಎಸ್.ಎಂ.ಕೃಷ್ಣ ಅವರು, ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವೀಧರರಾದ ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ಬಳಿಕ ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದರು. ವಾಷಿಂಗ್ಟನ್‍ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ವಿದ್ಯಾರ್ಥಿವೇತನವನ್ನು ಪಡೆದುಕೊಂಡರು. ಭಾರತಕ್ಕೆ ಮರಳಿದ ನಂತರ ಬೆಂಗಳೂರಿನ ರೇಣುಕಾಚಾರ್ಯ ಲಾ ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಎಫ್ ಕೆನಡಿ ಪ್ರಭಾವದಿಂದಾಗಿ ಎಸ್‍ಎಂ ಕೃಷ್ಣ ಅವರು ರಾಜಕೀಯ ರಂಗ ಪ್ರವೇಶ ಮಾಡಿದ್ದರು. 1950 ರಂದು ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಪದವಿ ಪಡೆದ ನಂತರ 1955 ರಲ್ಲಿ ಬೆಂಗಳೂರಿನ ಲಾ ಕಾಲೇಜಿನಲ್ಲಿ ಕೃಷ್ಣ ಬಿ.ಎಲ್ ಪದವಿ ಪಡೆದರು. ಬಳಿಕ ಆ ಕಾಲದ ಹೆಸರಾಂತ ವಕೀಲರಾದ ಗಣೇಶರಾಯರ ಬಳಿ ಜೂನಿಯರ್ ಆಗಿ ಸೇರಿದ್ದರು. 1958 ರಲ್ಲಿ ಉನ್ನತ ವ್ಯಾಸಂಗಕ್ಕೆ ಕೃಷ್ಣ ಅವರು ಅಮೆರಿಕಗೆ ತೆರಳುತ್ತಾರೆ. ಅಲ್ಲಿನ ಟೆಕ್ಸಾಸ್‍ನ ಡಲ್ಲಾಸ್ ನಗರದ ಸದರನ್ ಮೆಥಾಡಿಸ್ಟ್ ವಿವಿಯಲ್ಲಿ ಎಂ.ಸಿ.ಎಲ್ ಪದವಿ ಪಡೆಯುತ್ತಾರೆ. ನಂತರ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪಿಹೆಚ್‍ಡಿಗೆ ಸೇರಿದರೂ ಅವರು ಪೂರ್ಣಗೊಳಿಸುವುದಿಲ್ಲ. ಈ ಸಂದರ್ಭದಲ್ಲಿ ಜಾನ್.ಎಫ್.ಕೆನಡಿ ಅವರ ಪ್ರಭಾವಕ್ಕೆ ಕೃಷ್ಣ ಅವರು ಒಳಗಾಗುತ್ತಾರೆ. 1960 ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಯುವ ರಾಜಕಾರಣಿ ಕೆನಡಿ ಸ್ಪರ್ಧಿಸಿದ್ದ ವೇಳೆ ಅವರ ಪರ ಕೃಷ್ಣ ಅವರು ಪ್ರಚಾರ ನಡೆಸಿದ್ದರು. ಚುನಾವಣೆಯಲ್ಲಿ ಜಯಗಳಿಸಿದ ನಂತರ ಕೆನಡಿ ಅವರು ಎಸ್‍ಎಂ ಕೃಷ್ಣ ಅವರಿಗೆ ಧನ್ಯವಾದ ಪತ್ರವನ್ನ ಕೂಡ ಬರೆದಿದ್ದರು.










