ಬೆಂಗಳೂರಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ: ಬಿಜೆಪಿ ನಾಯಕರೊಂದಿಗೆ ಮಾತುಕತೆ.

38

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತು ಭಿನ್ನಮತ ಚಟುವಟಿಕೆಗಳ ನಡುವಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ್ದು, ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ್, ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿ ಸ್ವಾಗತಿಸಿದರು. ನಂತರ ವಿಮಾನ ನಿಲ್ದಾಣದ ವಿಐಪಿ ಲಾಂಜ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ರಾಜ್ಯದ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಹೇಗೆ ನಡೆಯುತ್ತಿವೆ ಎಂದು ಮಾಹಿತಿ ಕೇಳಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆ ಬೆಳವಣಿಗೆ ಕುರಿತು ಪ್ರಸ್ತಾಪಿಸಿ ಕರ್ನಾಟಕ ಸ್ಥಿತಿಗತಿ ಕುರಿತು ವಿವರ ತಿಳಿದುಕೊಂಡರು. ಇದೇ ವೇಳೆ ಪ್ರತಿಕ್ರಿಸಿದ ರಾಜ್ಯ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರಕ್ಕೆ ಯೋಜನೆಗಳನ್ನು ಮುಂದುವರಿಸುವುದು ಕಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ. ಇದಲ್ಲದೆ ಸಾರಿಗೆ ದರ ಏರಿಕೆಯ ಕುರಿತು ಮಾಹಿತಿ ನೀಡಿದರು.