ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಹಲವೆಡೆ ಟ್ರಾಫಿಕ್ ಜಾಮ್‍ನಿಂದ ವಾಹನ ಸವಾರರು ಪರದಾಡುವಂತಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 30ಸಾವಿರ ಆಶಾ ಕಾರ್ಯಕರ್ತೆಯರು ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಿದ್ದು, ತಮ್ಮ ಬೇಡಿಕೆಗಳು ಈಡೇರದಿದ್ದರೆ ಆಹೋ ರಾತ್ರಿ ಧರಣಿ ನಡೆಸುವುದಾಗಿ ತೀರ್ಮಾನಿಸಿದ್ದಾರೆ. ಕಳೆದ ವರ್ಷವೂ ಬೇಡಿಕೆ ಈಡೇರಿಸಲು ನಡೆಸಿದ ಪ್ರತಿಭಟನೆ ವೇಳೆ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಇದುವರೆಗೂ ಅವರ ಬೇಡಿಕೆ ಈಡೇರದ ಕಾರಣ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆಯಿಂದ ಕೆ ಆರ್ ಮಾರ್ಕೆಟ್, ಕಲಾಸಿಪಾಳ್ಯ, ಮೇಕ್ರಿ ಸರ್ಕಲ್, ಶಿವಾಜಿ ನಗರ, ಫ್ರೀಡಂ ಪಾರ್ಕ್ ಸುತ್ತಮುತ್ತ, ವಿಧಾನ ಸೌಧ, ಮೆಜೆಸ್ಟಿಕ್, ಮಲ್ಲೇಶ್ವರ, ರಾಜಾಜಿನಗರ ಹೀಗೆ ಬೆಂಗಳೂರಿನ ಅರ್ಧ ಭಾಗದಷ್ಟು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.










