ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ…

65
firstsuddi

ಬೆಂಗಳೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ದಾವಣಗೆರೆ, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಎಸ್ ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಅವರ ಶಿಕಾರಿಪುರದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ಹಾಗೂ ನಿವೃತ್ತ ಡಿಸಿಎಫ್ ನಾಗರಾಜ್ ಅವರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ತೋಟದ ಮನೆಯ ಮೇಲೂ ದಾಳಿ ನಡೆದಿದೆ. ಇಬ್ಬರು ಅಧಿಕಾರಿಗಳ ಏಳು ಸ್ಥಳಗಳ ಮೇಲೆ ಏಕಕಾಲಕ್ಕೆ ರೇಡ್ ಆಗಿದೆ. ದಾವಣಗೆರೆ ಲೋಕಾಯುಕ್ತ ಎಸ್‌ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಬೆಂಗಳೂರಿನ ಬಿಬಿಎಂಪಿ ಎಇಇ ಟಿ.ಹನುಮಂತರಾಯ ಮನೆ ಮೇಲೆ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೋಚಾಪುರ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಎಸ್ ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಬೀದರ್ ಜಿಲ್ಲೆಯ 6 ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್ ವಿಜಯಕುಮಾರ್ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೀದರ್ ನ ಆನಂದ್ ನಗರ ಮನೆ, ಬಸವಕಲ್ಯಾಣದ ಮನೆ, ಕಚೇರಿ, ನಗರದ ಗ್ಯಾರೆಜ್ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ ಅವರ ಬೀದರ್ ನ ಗುರುನಗರದ ಮನೆ, ನೌಬಾದ್ ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ.