ಬೆಳಗಾವಿ : ಕಲುಷಿತ ನೀರು ಸೇವಿಸಿ ವೃದ್ಧ ಸಾವು…

56
firstsuddi

ಬೆಳಗಾವಿ : ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದ ನಿವಾಸಿ ಶಿವಪ್ಪ (70) ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ತೀವ್ರವಾಗಿ ಅಸ್ವಸ್ಥರಾಗಿದ್ದ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುದೇನೂರು ಗ್ರಾಮದ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಸೇರಿ ಕಲುಷಿತಗೊಂಡಿತ್ತು. ಇದೇ ನೀರು ಮನೆಗಳಿಗೆ ಸರಬರಾಜಾಗಿತ್ತು. ಕಲುಷಿತ ನೀರು ಸೇವನೆಯಿಂದ ಕೇವಲ 4 ದಿನಗಳ ಅಂತರದಲ್ಲಿ 94 ಜನರು ಅಸ್ವಸ್ಥರಾಗಿದ್ದಾರೆ. ಈ ಪೈಕಿ 44 ಪುರುಷರು, 30 ಮಹಿಳೆಯರು, 12 ಬಾಲಕರು, 8 ಬಾಲಕಿಯರು ಇದ್ದಾರೆ. ಬಹುತೇಕರಿಗೆ ವಾಂತಿ, ಬೇಧಿ ಸಮಸ್ಯೆ ಕಾಡುತ್ತಿದೆ. ಅಸ್ವಸ್ಥಗೊಂಡಿರುವ ಇತರ ನಾಲ್ವರ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ನಿನ್ನೆ ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.