ನವದೆಹಲಿ: ಇಂದು ಬೆಳ್ಳಂಬೆಳಗ್ಗೆಯೇ ದೆಹಲಿ-ಎನ್‍ಸಿಆರ್‍ನಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜನರು ಗಾಬರಿಯಾಗಿದ್ದಾರೆ. ಬೆಳಗ್ಗೆ 5:36ರ ಸುಮಾರಿಗೆ 5 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಆದರೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಉತ್ತರ ಭಾರತದಾದ್ಯಂತ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‍ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭೂಕಂಪದಿಂದ ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‍ನಲ್ಲಿರುವ ಹಲವಾರು ಬಹುಮಹಡಿ ಕಟ್ಟಡಗಳ ನಿವಾಸಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಂಪನ ಸಂಭವಿಸಿದ ಕೂಡಲೇ ಜನರಿಗೆ ಗಾಬರಿಯಾಗದಿರಲು ಮನವಿ ಮಾಡಿದ್ದಾರೆ. ಎಲ್ಲರೂ ಸುರಕ್ಷಾ ನಿಯಮಗಳನ್ನು ಪಾಲಿಸಿ ಶಾಂತವಾಗಿರಿ. ಅಧಿಕಾರಿಗಳು ಪರಿಸ್ಥಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಜನರಿಗೆ ಧೈರ್ಯ ತುಂಬಿದ್ದಾರೆ.










