ಕ್ಯಾನ್ಬೆರಾ : ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು, ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ ಆರೋಪದ ಮೇಲೆ ಆಸ್ಟ್ರೇಲಿಯಾ ಪೊಲೀಸರು ಭಾರತೀಯನನ್ನು ಗುಂಡಿಕ್ಕಿ ಕೊಂದಿದ್ದಾರೆ.
ಮೃತನನ್ನು ತಮಿಳುನಾಡು ಮೂಲದ ಮೊಹಮ್ಮದ್ ರಹಮತುಲ್ಲಾ ಸೈಯದ್ ಅಹ್ಮದ್ (32) ಎಂದು ಗುರುತಿಸಲಾಗಿದೆ. ಅಹ್ಮದ್ ನಿನ್ನೆ ಮಧ್ಯರಾತ್ರಿ 12.03ರ ಸುಮಾರಿಗೆ ಸಿಡ್ನಿಯ ಪಶ್ಚಿಮದಲ್ಲಿರುವ ಆರ್ಬನ್ ರೈಲ್ವೆ ನಿಲ್ದಾಣದಲ್ಲಿ 28 ವರ್ಷದ ಕ್ಲೀನರ್ ಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಆರ್ಬನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾನೆ. ಈ ವೇಳೆ ಪೊಲೀಸರು ಆತನನ್ನು ಬಂಧಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಚಾಕುವಿನಿಂದ ಪೊಲೀಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದ್ದಾನೆ.
ಆತ್ಮ ರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಆತ ಕುಸಿದು ಬಿದ್ದಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಗುಂಡೇಟಿಗೆ ಬಲಿಯಾದ ಭಾರತೀಯ ಪ್ರಜೆ ಮಾನಸಿಕ ಅಸ್ವಸ್ಥನಾಗಿರಬಹುದು ಎಂಬ ಶಂಕೆಯನ್ನು ಅಲ್ಲಿನ ಪೊಲೀಸರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆತನ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ.










